🔥 TRENDING West Bengal Board Announces HS 3rd Sem... পিয়ালি রাশ ও গ্রামীন মেলা প্রশাসনিক স... Severe Cyclonic Storm Akvan Nears Indi... Tejashwi Yadav Slams Bihar Government... Bihar Law Department Opens 2026 Recrui... Bihar Launches New Police Data Centre,...
20 Nov 2026•
ગુજરાતી मराठी ਪੰਜਾਬੀ বাংলা

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸುವುದು ಹಾಗೂ ಸಂತ್ರಸ್ತರಿಗೆ ಸಕಾಲದಲ್ಲಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ

✍️ Reporter: Ningappa 🗓 13 Nov 2026, 01:04 PM 👁 66
Share: 💬 WhatsApp 📘 Facebook 𝕏 Post
ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸುವುದು ಹಾಗೂ ಸಂತ್ರಸ್ತರಿಗೆ ಸಕಾಲದಲ್ಲಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾಗೃತ ಮತ್ತು ಉಸ್ತುವಾರಿ (ದೌರ್ಜನ್ಯ ನಿಯಂತ್ರಣ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ವಸತಿ, ಶಿಕ್ಷಣ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರೊಂದಿಗೆ ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಧನವನ್ನು ವಿಳಂಬವಿಲ್ಲದೆ ವಿತರಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಬೇಕು. ವಿವಿಧ ಇಲಾಖೆಗಳು ಹಾಗೂ ಅಭಿವೃದ್ಧಿ ನಿಗಮಗಳ ಮೂಲಕ ದೊರೆಯುವ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಗುರುತಿಸಲಾದ ಗ್ರಾಮಗಳಲ್ಲಿ ಎಲ್ಲ ಸಮುದಾಯಗಳ ಮುಖಂಡರನ್ನು ಒಳಗೊಂಡ ಸಭೆಗಳನ್ನು ನಿಯಮಿತವಾಗಿ ಆಯೋಜಿಸಿ, ಗ್ರಾಮಸ್ಥರಿಗೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಸಮುದಾಯಗಳ ನಡುವೆ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಕಾಪಾಡಲು ಕ್ರಮವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ ಅವರು ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಪ್ರತಿ ಬುಧವಾರ ಶಾಂತಿ ಪಾಲನಾ ಸಭೆಗಳನ್ನು ಹಾಗೂ ಪೊಲೀಸ್ ಠಾಣೆಗಳಲ್ಲಿ ಪ್ರತಿ ಭಾನುವಾರ ಸಭೆಗಳನ್ನು ನಡೆಸುವ ಮೂಲಕ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
📲Get App