🔥 TRENDING नांदणी चेक पोस्टवर कर्मचाऱ्यांचा मनमान... સ્થાનિક વેચાણમાંથી કુલ GST કલેક્શન ૧૬%... दिवाली बोनस के नाम पर साइबर ठगी का जाल... வங்கக்கடலில் உருவான புயல்! தமிழகத்திற்... MANUU B.Voc-M.Voc Students Ki NCAHP Re... अलीगंज में व्यापारी पर लूटकांड: तीन बद...
01 Nov 2026•
ગુજરાતી मराठी ਪੰਜਾਬੀ বাংলা

ದೇವದುರ್ಗದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ: ಭುವನೇಶ್ವರಿ ಭಾವಚಿತ್ರದ ಮೆರವಣಿಗೆಗೆ ಶಾಸಕಿ ಕರೆಮ್ಮ ಜಿ. ನಾಯಕ ಚಾಲನೆ

✍️ Reporter: Khaja Hussain 🗓 01 Nov 2026, 11:12 PM 👁 10
Share: 💬 WhatsApp 📘 Facebook 𝕏 Post
**ದೇವದುರ್ಗ | ಬ್ರೇಕಿಂಗ್ ನ್ಯೂಸ್**

# ದೇವದುರ್ಗದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ: ಭುವನೇಶ್ವರಿ ಭಾವಚಿತ್ರದ ಮೆರವಣಿಗೆಗೆ ಶಾಸಕಿ ಕರೆಮ್ಮ ಜಿ. ನಾಯಕ ಚಾಲನೆ

### ರಾಜ್ಯೋತ್ಸವದ ಸರಳ ಆಚರಣೆಗೆ ಕರವೇ ಮುಖಂಡರ ಅಸಮಾಧಾನ; ಮುಂದಿನ ವರ್ಷದಿಂದ ಅದ್ದೂರಿಯಾಗಿ ಆಚರಿಸಲು ಆಗ್ರಹ

**ದೇವದುರ್ಗ, ನ. 1:** ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ದೇವದುರ್ಗ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ರಥಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಅವರು ಚಾಲನೆ ನೀಡಿದರು. ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕ ಕ್ಲಬ್ ಮೈದಾನವನ್ನು ತಲುಪಿತು. ನಂತರ ವೇದಿಕೆಯಲ್ಲಿ ಗಣ್ಯರನ್ನು ಸ್ವಾಗತಿಸಲಾಯಿತು.

ಸರಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಗೂ ರಾಷ್ಟ್ರಗೀತೆ ಹಾಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ರಾಜಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು. ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಶಿವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಹೋರಾಟಗಾರರು, ಸಾಹಿತಿಗಳು ಹಾಗೂ ಕವಿಗಳು ಶ್ರಮಿಸಿದ್ದಾರೆ. ಅವರ ಪರಿಶ್ರಮದ ಫಲವಾಗಿ ಕನ್ನಡ ನಾಡು ರೂಪುಗೊಂಡಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಲಕ್ಷ್ಮಣ ಜ್ಯೋತಿ ಮಾತನಾಡಿ, ತಾಲೂಕು ಆಡಳಿತವು ರಾಜ್ಯೋತ್ಸವವನ್ನು ಕೇವಲ ಔಪಚಾರಿಕವಾಗಿ ಆಚರಿಸುತ್ತಿದೆ. ಸಮರ್ಪಕವಾಗಿ ಹಾಗೂ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಶೇಷ ಉಪನ್ಯಾಸ ನೀಡಿದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ರಂಗಪ್ಪ ನಾಯಕ ಮಾತನಾಡಿ, ಕದಂಬರ ಕಾಲದ ಶಾಸನಗಳು ಕನ್ನಡ ಭಾಷೆಯ ಪ್ರಾಚೀನತೆಯನ್ನು ಸಾರುತ್ತವೆ. ಶರಣರು, ದಾಸರು ಹಾಗೂ ಸೂಫಿ ಸಂತರು ಕನ್ನಡ ಭಾಷೆಯ ಶ್ರೀಮಂತಿಕೆಗೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರತಿಯೊಬ್ಬರೂ ಕನ್ನಡದ ಬಗ್ಗೆ ಅಭಿಮಾನ ಹೊಂದುವುದರ ಜತೆಗೆ ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಬೇಕು. ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

**ಬಾಕ್ಸ್ ಸುದ್ದಿ**

### ರಾಜ್ಯೋತ್ಸವದ ಸರಳ ಆಚರಣೆ ಖಂಡಿಸಿ ಕರವೇ ಮುಖಂಡರ ಪ್ರತಿಭಟನೆ

ರಾಜ್ಯೋತ್ಸವ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಕಾರ್ಯಕ್ರಮದ ಸರಳ ಆಯೋಜನೆ ಹಾಗೂ ಕನ್ನಡ ಬಾವುಟಗಳನ್ನು ಸಮರ್ಪಕವಾಗಿ ಕಟ್ಟದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಪ್ರತಿಭಟನೆ ನಡೆಸಿದರು.

ರಾಜ್ಯೋತ್ಸವದಂತಹ ನಾಡಹಬ್ಬವನ್ನು ಕನ್ನಡದ ಸಂಭ್ರಮಕ್ಕೆ ತಕ್ಕಂತೆ ಅಚ್ಚುಕಟ್ಟಾಗಿ ಆಯೋಜಿಸಬೇಕಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾರ್ಯಕ್ರಮ ಅಸ್ತವ್ಯಸ್ತವಾಗಿ ನಡೆದಿದೆ ಎಂದು ಕರವೇ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಕನ್ನಡ ರಾಜ್ಯೋತ್ಸವವನ್ನು ಕನ್ನಡದ ಸಂಭ್ರಮ ಮತ್ತು ಸಡಗರದೊಂದಿಗೆ ಅದ್ದೂರಿಯಾಗಿ ಆಚರಿಸಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಕರವೇ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಬಾಕ್ಸ್ ನಲ್ಲಿ

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್ ಅವರು ಕರವೇ ಮುಖಂಡರನ್ನು ಸಮಾಧಾನಪಡಿಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

**ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು:**

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪತಹಸೀಲ್ದಾರ್ ಪರಶುರಾಮ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಲಕ್ಷ್ಮಣ ಜ್ಯೋತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್, ಸಮಾಜ ಕಲ್ಯಾಣ ಅಧಿಕಾರಿ ರಾಜಕುಮಾರ್, ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಆದಿ ಕಮಲಮ್ಮ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹನುಮಂತರಾಯ ಶಾಖೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಜ್, ಸಿಡಿಪಿಒ ಮಹೇಶ್ ನಾಯಕ, ಅರಣ್ಯ ಅಧಿಕಾರಿ ಅಲಿಮುದ್ದಿನ್, ಪುರಸಭೆ ಅಧಿಕಾರಿ ಗಂಗಾಧರ್, ಲೋಕೋಪಯೋಗಿ ಇಲಾಖೆಯ ಎಇಇ ನಿವಾಸ ನಾಯಕ, ಬಿಸಿಎಂ ಅಧಿಕಾರಿ ಬಾಬು, ಎಇಇ ಭೀಮಾಶಂಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ರಾಧಾದೇವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕರವೇ ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ಬಸವರಾಜ್ ಗೋಪಾಳಪುರ, ಸುರೇಶ್ ಪಾಟೀಲ್, ಟಿ. ಜಯರಾಮ್, ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಸೇರಿದಂತೆ ಕರವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಪತ್ರಕರ್ತರು, ಜಾಲಹಳ್ಳಿ.**
📲Get App